ನವದೆಹಲಿ: ಜಾಹೀರಾತು ವೆಚ್ಚಕ್ಕೆ ಸಂಬಂಧಿಸಿದಂತೆ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಇದೀಗ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮದ ಪ್ರಚಾರಕ್ಕಾಗಿ 36 ಕೋಟಿಗೂ ಹೆಚ್ಚು ಖರ್ಚು ಮಾಡಿರುವುದು ಬಹಿರಂಗವಾಗಿದೆ.
ಮೋದಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಒಂದು ದಿನದ 'ಏಕ್ ನಯಿ ಸುಬಹ್' ಅದ್ಧೂರಿ ಕಾರ್ಯಕ್ರಮಕ್ಕಾಗಿ 36 ಕೋಟಿಗೂ ಅಧಿಕ ವೆಚ್ಚ ಮಾಡಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಬಹಿರಂಗವಾಗಿದೆ.
ಕೇವಲ ಆರು ಗಂಟೆಗಳ ಒಂದು ಕಾರ್ಯಕ್ರಮದ ಪ್ರಚಾರಕ್ಕಾಗಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ರು.36,64,88,085 ಜಾಹೀರಾತು ನೀಡಲಾಗಿದೆ.
ಆರ್ ಟಿಐ ಅಡಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡಿರುವ ಜಾಹೀರಾತು ಮತ್ತು ದೃಶ್ಯ ಪ್ರಚಾರ ನಿರ್ದೇಶನಾಲಯ (ಡಿಎವಿಪಿ) ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮುದ್ರಣ ಮಾಧ್ಯಮಕ್ಕೆ 35.59 ಕೋಟಿ ಹಾಗೂ ವಿದ್ಯುನ್ಮಾನ ಮಾಧ್ಯಮಕ್ಕೆ 1.06 ಕೋಟಿ ರುಪಾಯಿ ಜಾಹೀರಾತಿ ನೀಡಿರುವುದಾಗಿ ತಿಳಿಸಿದೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 29ರಂದು ಇಂಡಿಯಾ ಗೇಟ್ ಬಳಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.