
ಇಂಪಾಲ: ಮಣಿಪುರದಲ್ಲಿ ಪ್ರಬಲ ಐಇಡಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ತಡರಾತ್ರಿಯಲ್ಲಿ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ ನಡೆದಿದ್ದು, ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್ ಬಿಎನ್) ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಹಿಂದೆ ಪ್ರತ್ಯೇಕ ನಾಗಾಲ್ಯಾಂಡ್ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವ ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ ಸಂಘಟನೆಯ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಆದರೆ ಈ ವರೆಗೂ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ. ಇನ್ನು ಇದೇ ಉಖ್ರುಲ್ ಜಿಲ್ಲೆಗೆ ಮಣಿಪುರ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಭೇಟಿ ನೀಡುತ್ತಿದ್ದು, ಕೆಲ ಅಭಿವದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮೊದಲೇ ಐಇಡಿ ಬಾಂಬ್ ದಾಳಿ ನಡೆಸಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಅವರು ಭೇಟಿ ನೀಡುವ ಎಲ್ಲ ಸ್ಥಳಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೀಗಾಗಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
Advertisement