
ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸೋಫಿಯನ್ ಜಿಲ್ಲೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘರ್ಷಣೆ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಸೋಫಿಯನ್ ಜಿಲ್ಲೆಯಲ್ಲಿ ಗುಂಪು ಗೂಡಿ ಬಂದಿದ್ದ ಜನರು ಸ್ವಾತಂತ್ರ್ಯದ ಪರವಾಗಿ ಘೋಷಣೆ ಕೂಗಲು ಆರಂಭಿಸಿದ್ದಾರೆ. ಅಲ್ಲದೆ, ಪ್ರತಿಭಟನೆಗೆ ಜನರು ಕೈಜೋಡಿಸುವಂತೆ ಘೋಷಣೆ ಕೂಗಲು ಪ್ರಾರಂಭಿಸಿದ್ದಾರೆ. ಈ ವೇಳೆ ಸೇನೆ ಮಧ್ಯೆ ಪ್ರವೇಶ ಮಾಡಿದಾಗ ದುಷ್ಕರ್ಮಿಗಳ ಗುಂಪೊಂದು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಕಚೇರಿಗೆ ಬೆಂಕಿ ಹಂಚಿದ್ದಾರೆ. ಪರಿಣಾಮ ಸ್ಥಳದಲ್ಲಿ ಘರ್ಷಣೆಯುಂಟಾಗಿದ್ದು, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಘಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯಾವುದೇ ಕೆಲಸಗಾರರು ಇರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರತಿಭಟನಾನಿರತರನ್ನು ಚದುರಿಸುವ ವೇಳೆ ಭದ್ರತಾ ಸಿಬ್ಬಂದಿಗಳಿಗೂ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ.
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಳೆದ 50ಕ್ಕೂ ಹೆಚ್ಚು ದಿನಗಳಿಂದ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಮಾಡುವ ಉದ್ದೇಶದಿಂದ ಸರ್ವಪಕ್ಷ ಸಭೆ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ 28 ಸದಸ್ಯರೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.
Advertisement