
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಮತ್ತೆ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಆರಂಭವಾಗಿದ್ದು, ಮತ್ತೊರ್ವ ಉಗ್ರನನ್ನು ಸದೆಬಡಿಯುವಲ್ಲಿ ಸೇನೆ ಸೋಮವಾರ ಯಶಸ್ವಿಯಾಗಿದೆ.
ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭದ್ರತಾ ಸಿಬ್ಬಂದಿಗಳು ಹತ್ಯೆ ಮಾಡಿದ್ದರು. ಗುಂಡಿನ ಚಕಮಕಿಯಲ್ಲಿ ಓರ್ವ ಪೇದೆ ಮೃತಪಟ್ಟಿದ್ದರು.
ಗಡಿಯಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಕೂಡ ಸೇನಾಪಡೆ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ಸೇನಾ ಪಡೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಇದರಂತೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಯೋಧರು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೇನಾ ಶಿಬಿರದ ಹತ್ತಿರದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಅಡಗಿ ಕುಳಿತಿರುವ ಉಗ್ರರು ಸೇನಾಪಡೆಯ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಉಗ್ರರ ದಾಳಿಗೆ ಯೋಧರು ದಿಟ್ಟ ಉತ್ತರ ನೀಡುತ್ತಿದ್ದಾರೆಂದು ಅವರು ಹೇಳಿದ್ದಾರೆ.
Advertisement