ನವದೆಹಲಿ: ಬೆಂಗಳೂರಿನ ಈಗಲ್ ಟನ್ ರೆಸಾರ್ಟ್ ನಲ್ಲಿ ತಂಗಿದ್ದ ಗುಜರಾತ್ ನ 44 ಕಾಂಗ್ರೆಸ್ ಶಾಸಕರು ನಾಳೆ ತಮ್ಮ ರಾಜ್ಯಕ್ಕೆ ಮರಳಲಿದ್ದಾರೆ. ಭಾರತೀಯ ಜನತಾ ಪಾರ್ಟಿ ಸೇರಲು ಯಾವುದೇ ರಾಜಕೀಯ ಒತ್ತಡಗಳಿಗೆ, ಪೊಲೀಸರಿಗಾಗಲಿ ತಾವು ಬೆದರುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ವದಂತಿ ದಟ್ಟವಾಗಿದ್ದ ಹಿನ್ನೆಲೆಯಲ್ಲಿ ಗುಜರಾತ್ ನ 44 ಮಂದಿ ಶಾಸಕರು ಬೆಂಗಳೂರಿನ ಬಿಡದಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ಈಗಲ್ ಟನ್ ರೆಸಾರ್ಟ್ ನಲ್ಲಿ ತಂಗಿದ್ದರು.
ಇದೇ 8ರಂದು ನಡೆಯುವ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಗ್ವಿ ಆರೋಪಿಸಿದ್ದರು. ಗುಜರಾತ್ ನಲ್ಲಿ ಕಳೆದ ವಾರ 6 ಮಂದಿ ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಈ ಎಲ್ಲಾ ಬೆಳವಣಿಗೆಗಳು ನಡೆದಿದ್ದವು.