

ಲಖನೌ: ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ನಡೆದ ಆಸ್ಪತ್ರೆ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯಾನಾಥ್ ಅವರು ಉನ್ನತ ಮಟ್ಟದ ಅಧಿಕಾರಿಗಳು ತುರ್ತು ಸಭೆ ಕರೆದಿದ್ದಾರೆ.
ಲಖನೌನಲ್ಲಿ ಸಿಎಂ ಯೋಗಿ ಆದಿತ್ಯಾನಾಥ್ ಸಭೆ ಕರೆದಿದ್ದು, ಅಧಿಕಾರಿಗಳಿಂದ ಬಿಆರ್ ಡಿ ಆಸ್ಪತ್ರೆ ದುರಂತಕ್ಕೆ ಸಂಬಂಧಿಸಿದಂತ ವರದಿ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಇಂದಿನ ಮಹತ್ವದ ಸಭೆಗೆ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು, ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಸಭೆ ಬಳಿಕ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್ ಅವರು ಖುದ್ಧು ದುರಂತ ಸಂಭವಿಸಿದ ಬಿಆರ್ ಡಿ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಪ್ರತ್ಯಕ್ಷ ಮಾಹಿತಿ ಕಲೆಹಾಕಲಿದ್ದಾರೆ. ಬಳಿಕ ಆ ವರದಿಯನ್ನು ಸಿಎಂ ಯೋಗಿ ಆದಿತ್ಯಾನಾಥ್ ಅವರಿಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.