ಚೆನ್ನೈ: ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಚೆನ್ನೈನ ಕಾವೇರಿ ಆಸ್ಪತ್ರೆಗೆ ಇಂದು ಬೆಳಿಗ್ಗೆ ಕರುಣಾನಿಧಿಯವರು ದಾಖಲಾಗಿದ್ದು, ಕೆಲವು ಪರೀಕ್ಷೆಗಳ ಬಳಿಕ ಇಂದೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳುವ ಸಾಧ್ಯತೆಗಳಿವೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕೃತಕ ಆಹಾರ ಪೂರೈಕೆ ಪೈಪ್ ಬದಲಾವಣೆಗಾಗಿ ಕರುಣಾನಿಧಿಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಚಿಕಿತ್ಸೆ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಕಾವೇರಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ,
ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿಯೂ ಅನಾರೋಗ್ಯದ ಕಾರಣಕ್ಕೆ ಕರುಣಾನಿಧಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಆಳ್ವಾರ್ ಪೇಟ್ ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟ ಸಮಸ್ಯೆ ಹಾಗೂ ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.