ಮಧ್ಯಪ್ರದೇಶ: ಅಮೋನಿಯಾ ಅನಿಲ ಸೋರಿಕೆ- 50 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಶಾಲಾ ಆವರಣದ ಬಳಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಂದ್ವಾರಾ: ಮಧ್ಯಪ್ರದೇಶದ ಶಾಲಾ ಆವರಣದ ಬಳಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. 

ಚಿಂದ್ವಾರಾ ಜಿಲ್ಲೆಯ ನರ್ಸಿಂಗ್ಪುರ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಶಾಲೆಯಲ್ಲಿ ಒಟ್ಟು 800 ವಿದ್ಯಾರ್ಥಿಗಳಿದ್ದರು. ಅಮೋನಿಯಾ ಅನಿಲ ಸೋರಿಯಾದ ಪರಿಣಾಮ 50ಕ್ಕೂ ಹೆಚ್ಚು ಮಕ್ಕಳಲ್ಲಿ ಉಸಿರಾಟ ಸಮಸ್ಯೆ ಎದುರಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. 

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಜೆ.ಕೆ.ಜೈನ್ ಅವರು ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. 

ಎಂದಿನಂತೆ 10.15ರ ಸುಮಾರಿಗೆ ಮಕ್ಕಳು ಬೆಳಗಿನ ಪ್ರಾರ್ಥನೆಗೆ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಪರಿಣಾಮ 50ಕ್ಕೂ ಹೆಚ್ಚು ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಎದುರಾಗಿತ್ತು. ಕೆಲ ಮಕ್ಕಳು ಪ್ರಜ್ಞೆತಪ್ಪಿ ಬಿದ್ದಿದ್ದರು. ಕೂಡಲೇ ಮಕ್ಕಳನ್ನು ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಯಿತು. 

ಶಾಲೆಯಲ್ಲಿದ್ದ ಮಕ್ಕಳನ್ನು ಸ್ಥಳಾಂತರ ಮಾಡಲಾಯಿತು. ಚಿಕಿತ್ಸೆ ಕೊಡಿಸಿದ ಬಳಿಕ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಯಿತು. ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಅಂಗಡಿಯ ಮಾಲೀಕರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿಯವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com