

ಚಂಢೀಘಡ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಹರ್ಯಾಣ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಹಿಂಸಾಚಾರ ನಿಯಂತ್ರಿಸಿ ಇಲ್ಲ, ಹುದ್ದೆಯಿಂದ ಕೆಳಗಿಳಿಯಿರಿ ಎಂದು ಖಾರವಾಗಿ ಹೇಳಿದ್ದಾರೆ.
ಇಂದು ಮಧ್ಯಾಹ್ನ ಹಿಂಸಾಚಾರ ಭುಗಿಲೇಳುತ್ತಿದ್ದಂತೆಯೇ ಭದ್ರತಾ ಪರಿಶೀಲನೆ ಕುರಿತು ಪಂಜಾಬ್ ಮತ್ತು ಹರ್ಯಾಣ ಸಿಎಂಗಳಿಂದ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು, ಈ ವೇಳೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಕೂಡಲೇ ಹಿಂಸಾಚಾರದ ಕೇಂದ್ರ ಬಿಂದು ಪಂಚಕುಲಕ್ಕೆ ಭೇಟಿ ನೀಡುವಂತೆಯೂ ರಾಜನಾಥ್ ಸಿಂಗ್ ಸೂಚಿಸಿದ್ದಾರೆ ಎನ್ನಲಾಗಿದೆ. ಬಳಿಕ ಗಲಭೆ ಕುರಿತು ಮಾಹಿತಿ ಪಡೆದ ರಾಜನಾಥ್ ಸಿಂಗ್ ಅವರು ಹೆಚ್ಚುವರಿ ಪಡೆಗಳನ್ನು ನಿಯೋಜಿಸುವ ಕುರಿತು ಉಭಯ ರಾಜ್ಯಗಳ ಸಿಎಂಗಳಿಗೆ ಭರವಸೆ ನೀಡಿದ್ದಾರೆ.
ಕಾನೂನಿಗಿಂತ ಯಾರೂ ದೊಡ್ಡವರಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಖಟ್ಟರ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಯಾರೇ ಮಾಡಿದರೂ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಾಬಾ ರಾಮ್ ರಹೀಮ್ ಅನುಯಾಯಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಇನ್ನು ಪ್ರಕರಣ ಸಂಬಂಧ ಪಂಚಕುಲದಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ ನಾಥ್ ಸಿಂಗ್ ತರಾಟೆ ಬೆನ್ನಲ್ಲೇ ಪಂಚಕುಲಕ್ಕೆ ಸಿಎಂ ಭೇಟಿ
ದೂರವಾಣಿ ಕರೆ ಮಾಡಿದ್ದ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು ಸಿಎಂ ಮನೋಹರ್ ಲಾಲ್ ಖಟ್ಟರ್ ಅವರನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು, ಇದೀಗ ಪ್ರಕರಣದ ಕೇಂದ್ರ ಬಿಂದು ಪಂಚಕುಲಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಂತೆಯೇ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಯಾವುದೇ ಕಾರಣಕ್ಕೂ ಹಿಂಸಾಚಾರ ಪಸರಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.