ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರು ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರು ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಇಂದು ಬೆಳಿಗ್ಗೆ 4.30ರ ಸುಮಾರಿಗೆ ಪುಲ್ವಾಮ ಜಿಲ್ಲೆಯ ಜಿಲ್ಲಾ ಪೊಲೀಸ್ ರೇಖೆ (ಡಿಪಿಎಲ್) ಬಳಿ ಬಂದಿರುವ ಉಗ್ರರ ಗುಂಪೊಂದು ಯೋಧರು ಹಾಗೂ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಲ್ಲಿ ಅಡಗಿ ಕುಳಿತಿದ್ದು, ಉಗ್ರರ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ. ಸ್ಥಳದಲ್ಲಿ 2-3 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.