ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎನ್ ವಿ ರಾಮಣ್ಣ ಮತ್ತು ಅಮಿತವ್ ರಾಯ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ್ದು ಇದೇ ವೇಳೆ ಈ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಅತ್ಯಾಚಾರ ಆರೋಪಿ ಅಸಾರಾಂ ಬಾಪು ವಿಚಾರಣೆ ವಿಳಂಬವಾಗುತ್ತಿದ್ದು, ತ್ವರಿತ ವಿಚಾರಣೆಗೆ ಸೂಚನೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಈ ಸಂಬಂಧ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್ ಇಲ್ಲಿಯವರೆಗೂ ಅತ್ಯಾಚಾರ ಸಂತ್ರಸ್ತೆಯನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂದು ಪ್ರಶ್ನಿಸಿದೆ. ಈ ಸಂಬಂಧ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಗುಜರಾತ್ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ.