ನವದೆಹಲಿ: ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ನಾಳೆಯಿಂದ ಕಾಂಗ್ರೆಸ್ ನವರು ಮುಖ ಮುಚ್ಚಿಕೊಂಡು ರಸ್ತೆಯಲ್ಲಿ ಓಡಾಡಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಜನರು ಕಾಂಗ್ರೆಸ್ ಪಕ್ಷದ ವಿಭಜನೆಯ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಗೌರವ ಹೆಚ್ಚಿದೆ ಎಂದು ತೋರಿಸುತ್ತದೆ ಎಂದು ರಾಜಸ್ತಾನ್ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಹೇಳಿದ್ದಾರೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ್ದು ತನ್ನ ಮೊದಲ ಇನ್ನಿಂಗ್ಸ್ ನಲ್ಲೇ ರಾಹುಲ್ ಗಾಂಧಿ ಶೂನ್ಯ ಸಂಪಾದಿಸಿದ್ದಾರೆ ಎಂದು ಹೇಳಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯ ಸಾಧಿಸಿರುವುದು ನಮಗೆ ಸಂತಸದ ವಿಷಯ. ಇದು ಅಭಿವೃದ್ಧಿಯ ಜಯ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಧಾನಿ ಮೋದಿ ಸರ್ಕಾರದ ನೀತಿಗಳಿಗೆ ದೊರೆತ ಬೆಂಬಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತ್ ನಲ್ಲಿ ಬಿಜೆಪಿ ವಿರುದ್ಧ ಜಾತಿಗಳನ್ನು ಎತ್ತಿ ಕಟ್ಟಿದರೂ ಕೂಡ ಜನ ಅಭಿವೃದ್ಧಿಗೆ ಮತ ಹಾಕಿದ್ದಾರೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.