ನವದೆಹಲಿ: ಭಾರತದ ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್, ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಅವರು ಭಾರತದಲ್ಲಿ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ಹೇಳಿದ್ದಾರೆ.
ನಿನ್ನೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ಸಿಗದಿದ್ದರಿಂದ ಇಂದು ಫೇಸ್ಬುಕ್ ಲೈವ್ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿಕೊಂಡಿದ್ದು, ಈ ವೇಳೆ ಭಾರತ ಮಧುಮೇಹದಲ್ಲಿ ಜಾಗತಿಕ ರಾಜಧಾನಿ ಆಗಿದೆ ಎಂದರು.
ಇನ್ನು ಕ್ರೀಡೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಭಾರತದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಎಲ್ಲ ವಿಷಯಗಳಂತೆ ಕ್ರೀಡೆಯನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ. ಇನ್ನು ಸಾರ್ವಜನಿಕ ಸ್ಥಳಗಳನ್ನು ಕ್ರೀಡೆಗಳಿಗಾಗಿ ಉಳಿಸಬೇಕಿದೆ. ಅಲ್ಲದೆ ಕ್ರೀಡೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಸಚಿನ್ ಹೇಳಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಚಿನ್ ತೆಂಡೂಲ್ಕರ್ ಸದನದಲ್ಲಿ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ವಿಪಕ್ಷ ನಾಯಕರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಗ್ಗೆ ಇತ್ತೀಚೆಗೆ ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದು ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ಸಭಾಪತಿಗಳಾದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸದನವನ್ನು ಮುಂದೂಡಿದರು. ಇದರಿಂದಾಗಿ ಸಚಿನ್ ಅವರಿಗೆ ಮಾತನಾಡುವ ಅವಕಾಶ ತಪ್ಪಿತು.