ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಪಾಕಿಸ್ತಾನ ಧ್ವಜಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಕರು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಳೆ ಶ್ರೀನಗರದಲ್ಲಿ ನಡೆದಿದೆ.
ಇಂದು ಜಮಿಯಾ ಮಸೀದಿ ಪ್ರದೇಶದಲ್ಲಿ ತಮ್ಮ ಮುಖ ಮುಚ್ಚಿಕೊಂಡಿದ್ದ ಸುಮಾರು 25ಕ್ಕೂ ಹೆಚ್ಚು ಯುವಕರು ಪಾಕಿಸ್ತಾನದ ಬಾವುಟಗಳನ್ನು ಹಿಡಿದು ಸೇನೆ ವಿರುದ್ಧ ಘೋಷಣೆ ಕೂಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ ಪೊಲೀಸರ ಮೇಲೆ ಯುವಕರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಗಾಯಗೊಂಡ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಇತ್ತೀಚಿಗಷ್ಟೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರತ್ಯೇಕವಾದಿಗಳಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗವುದು ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.