ಕಣ್ಣೂರು: ಕೇರಳದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದು, ಪಾದ್ರಿ ನೀಡಿದ ಲೈಂಗಿಕ ಕಿರುಕುಳ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
ಕೊಟ್ಟಿಯೂರ್ ನ 10 ನೇ ತರಗತಿ ವಿದ್ಯಾರ್ಥಿನಿ ಫೆ.26 ರಂದು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಬಗ್ಗೆ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾರಂಭದಲ್ಲಿ ತಂದೆಯಿಂದಲೇ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಬಾಲಕಿಯ ತಂದೆಯನ್ನು ವಿಚಾರಣೆಗೊಳಪಡಿಸಿದಾಗ ಕೊಟ್ಟಿಯೂರ್ ಚರ್ಚ್ ನ ಪಾದ್ರಿ ಮ್ಯಾಥ್ಯೂ (ರಾಬಿನ್) ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದಾರೆ.
ಯುವತಿಯ ತಂದೆಯ ಹೇಳಿಕೆಯನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆಯ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಪ್ಪಿಸಿಕೊಂಡಿರುವ ಪಾದ್ರಿಗಾಗಿ ಶೋಧಕಾರ್ಯ ಪ್ರಾರಂಭಿಸಿದ್ದಾರೆ.