ಬಟಿಂಡಾ: ಪಂಜಾಬ್ ನ ಬಟಿಂಡಾ ಜಿಲ್ಲೆಯ ಮೌರ್ ಮಂಡಿಯಲ್ಲಿ ಮಂಗಳವಾರ ಸಂಭವಿಸಿದ್ದ ಪ್ರಬಲ ಕಾರ್ ಬಾಂಬ್ ಸ್ಫೋಟದಲ್ಲಿ ಗಂಭೀರಾವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಹರ್ಮಿಂದರ್ ಜಸ್ಸಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು ಮತ್ತು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಮೌರ್ ಮಂಡಿ ಹಾಗೂ ಬಟಿಂಡಾದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿವಾದಿತ ಗುರು ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ಆಪ್ತ ಸಂಬಂಧಿಯಾಗಿರುವ ಜಸ್ಸಿ ಅವರ ಸಮಾವೇಶದ ಬಳಿ ಈ ದುರ್ಘಟನೆ ಸಂಭವಿಸಿತ್ತು.
ಘಟನಾ ಸ್ಥಳಕ್ಕೆ ಇಂದು ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.