ಅಹಮದಾಬಾದ್: ಗುಜರಾತಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದ್ದು, ಮಳೆಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಮತ್ತು 214 ಮಂದಿಯನ್ನು ರಕ್ಷಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ.6 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೌರಾಷ್ಚ್ರ ಪ್ರದೇಶದ ಸುರೇಂದ್ರನಗರ, ಮೊರ್ಬಿ ಹಾಗೂ ರಾಜಕೋಟ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ವಾಯುಪಡೆ ದೌಡಾಯಿಸಿದ್ದು, ಪ್ರವಾಹದಲ್ಲಿ ಸಿಲುಕಿರುವ 214ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಕಳೆದ 24 ಗಂಟೆಗಳಿಂದ ಸೌರಾಷ್ಟ್ರದಲ್ಲಿ ಮಳೆ ಅಬ್ಬರಿಸಿದೆ. ಇಲ್ಲಿನ ಎಲ್ಲಾ ನದಿಗಳು ತುಂಬಿ ಹರಿಯುತ್ತಿದ್ದು, ಈ ಋತುವಿನ ಶೇ 52ರಷ್ಟು ಮಳೆಯಾಗಿದೆ ಎಂದು ಗುಜರಾತಿನ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಹೇಳಿದ್ದಾರೆ.
ಮಳೆಗೆ ಸಿಲುಕಿ ಸಾವನ್ನಪ್ಪಿದವರು ರಾಜ್‌ಕೋಟ್ ಹಾಗೂ ಅಮರೇಲಿ ನಿವಾಸಿಗಳು ಎಂದು ತಿಳಿದು ಬಂದಿದೆ. ಅಲ್ಲದೇ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.