ನವದೆಹಲಿ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಹಾರದಲ್ಲಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಲಾಲು ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬದ ವಿರುದ್ಧ ಗುರುವಾರ ಅಕ್ರಮ ಹಣ ವಹಿವಾಟು(ಮನಿ ಲಾಂಡರಿಂಗ್ ಕೇಸ್) ಪ್ರಕರಣ ದಾಖಲಿಸಿಕೊಂಡಿದೆ.
ಯುಪಿಎ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಹೋಟೆಲ್ ಗಳ ಹಂಚಿಕೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಹಾಗೂ ಅವರ ಕುಟುಂಬದ ವಿರುದ್ಧ ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ ಎಂದು ಇಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಇಡಿ ಅಧಿಕಾರಿಗಳು ಸಿಬಿಐಯಿಂದ ಎಫ್ ಐಆರ್ ಪ್ರತಿ ಪಡೆದು ಲಾಲು ಹಾಗೂ ಅವರ ಕುಟುಂಬದ ವಿರುದ್ಧ ಕೇಸ್ ದಾಖಲಿಸಿಕೊಂಡಿದೆ. ಈ ತಿಂಗಳ ಆರಂಭದಲ್ಲಿ ಲಾಲು ವಿರುದ್ಧ ಕ್ರಿಮಿನಲ್ ಎಫ್ಐಆರ್ ದಾಖಲಿಸಿದ್ದ ಸಿಬಿಐ ಹಲವು ಕಡೆ ದಾಳಿ ನಡೆಸಿತ್ತು.
ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಶ್ವಿ ಯಾದವ್ ಹಾಗೂ ಇತರರ ವಿರುದ್ಧ ತನಿಖೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪುತ್ರಿ ಮೀಸಾ ಭಾರತಿಯ ವಿರುದ್ಧವೂ ಇಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.