ನವದೆಹಲಿ: ಒಂದು ವೇಳೆ ಸಂವಿಧಾನದಲ್ಲಿ ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದರೆ ಕಣಿವೆ ರಾಜ್ಯದಲ್ಲಿ ತ್ರಿವರ್ಣ ಧ್ವಜವನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಶುಕ್ರವಾರ ಹೇಳಿದ್ದಾರೆ.
ಕಾಶ್ಮೀರಕ್ಕೆ ನೀಡಲಾಗಿರುವ ಸಂವಿಧಾನತ್ಮ ವಿಶೇಷ ಸ್ಥಾನಮಾನವನ್ನು ಬಲವಾಗಿ ಸಮರ್ಥಿಸಿಕೊಂಡ ಮುಫ್ತಿ, ಒಂದು ವೇಳೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಬದಲಾಯಿಸಿದರೆ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇಂದು ಕಾಶ್ಮೀರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಫ್ತಿ, 370ನೇ ವಿಧಿಯನ್ನು ರದ್ದುಗೊಳಿಸುವ ವಿಚಾರವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಹಾಗೂ ತಮ್ಮ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಸೇರಿದಂತೆ ಕೆಲವು ಪ್ರಮುಖ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಪ್ರಾಣ ಪಣಕ್ಕಿಟ್ಚು ಭಾರತದ ರಾಷ್ಚ್ರಧ್ವಜವನ್ನು ಎತ್ತಿ ಹಿಡಿಯುತ್ತಿದ್ದಾರೆ. ಒಂದು ವೇಳೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದರೆ ರಾಷ್ಟ್ರಧ್ಜಜ ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ.