ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಸಚಿವ ವೆಂಕಯ್ಯನಾಯ್ಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮುಂದಿನ ತಿಂಗಳು ನಡೆಯುವ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ಮಾಡಿದ್ದಾರೆ.
ಸೋನಿಯಾ ನಿವಾಸ 10 ಜನಪಥ್ ಗೆ ಆಗಮಿಸಿದ ಇಬ್ಬರು ಸಚಿವರು ಸುಮಾರು 30 ನಿಮಿಷಗಳ ಕಾಲ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯ ವೇಳೆ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಹಾಜರಿದ್ದರು.
ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ರಾಷ್ಟ್ರಪತಿ ಅಭ್ಯರ್ಥಿಗೆ ಬಿಜೆಪಿ ನಾಯಕರು ಯಾರ ಹೆಸರನ್ನು ಪ್ರಸ್ತಾಪಿಸಿಲ್ಲ, ಬದಲಾಗಿ ಅಭ್ಯರ್ಥಿಯ ಹೆಸರನ್ನು ಸೂಚಿಸುವಂತೆ ನಮಗೆ ಕೇಳಿದ್ದಾರೆ ಎಂದು ಹೇಳಿದ್ದಾರೆ.
ಈ ಇಬ್ಬರು ಸಚಿವರು ಈಗಾಗಲೇ ಹಲವು ಪಕ್ಷಗಳ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ತಿಸಿದ್ದಾರೆ. ಜೂನ್ 28 ಕ್ಕೆ ನಾಮ ಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ.