

ಕಲ್ಲಿಕೋಟೆ: ದೇವರನಾಡು ಕೇರಳದಲ್ಲಿ ಆಡಳಿತಾರೂಢ ಸಿಪಿಐ(ಎಂ) ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಗುರುವಾರ ರಾತ್ರಿ ಕಲ್ಲಿಕೋಟೆಯಲ್ಲಿರುವ ಆರ್‌ಎಸ್‌ಎಸ್ ಕಚೇರಿಯ ಮೇಲೆ ಬಾಂಬ್ ಎಸೆಯಲಾಗಿದ್ದು, ಇದಾದ ಕೆಲವೇ ಗಂಟೆಗಳ ಅಂತರದಲ್ಲಿ ಸಮೀಪದ ವಿಷ್ಣುಮಂಗಲಂನಲ್ಲಿರುವ ಸಿಪಿಐ(ಎಂ)ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದುಬಂದಿದೆ.
ರಾತ್ರೋ ರಾತ್ರಿ ಸಂಭವಿಸಿದ ಘರ್ಷಣೆಯಿಂದಾಗಿ ಕಲ್ಲಿಕೋಟೆ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ನಿನ್ನೆ ರಾತ್ರಿ ನಡೆದ ಘರ್ಷಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಇನ್ನು ನದಪುರಂನಲ್ಲಿನ ಆರ್ ಎಸ್ ಎಸ್ ಕಚೇರಿ ಮೇಲೆ ಅಪರಿಚಿತರು ಬಾಂಬ್ ಎಸೆದ ಪರಿಣಾಮ ನಾಲ್ಕು ಮಂದಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿನ್ನೆಯಷ್ಟೇ ಮಧ್ಯಪ್ರದೇಶದ ಆರ್ ಎಸ್ ಎಸ್ ನಾಯಕ ಕುಂದನ್ ಚಂದ್ರಾವತ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಲೆಗೆ 1 ಕೋಟಿ ಇನಾಮು ಘೋಷಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ಎಸೆಯಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಇಬ್ಬರು ಡಿವೈಎಫ್ ಐ ಕಾರ್ಯಕರ್ತ ಶವಪತ್ತೆ
ಮತ್ತೊಂದು ಪ್ರಕರಣದಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಎಲಪ್ಪುಲ್ಲಿಯಲ್ಲಿ ಇಬ್ಬರು ಡಿವೈಎಫ್ ಐ ಕಾರ್ಯಕರ್ತರ ಶವ ಪತ್ತೆಯಾಗಿದ್ದು, ರಾಜಕೀಯ ಸಂಘರ್ಷವೇ ಕಾರ್ಯಕರ್ತರ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದ್ದು, ಮೃತ ಡಿವೈಎಫ್ ಐ ಕಾರ್ಯಕರ್ತರನ್ನು ರತೀಶ್ ಮತ್ತು ಯೂಸುಫ್ ಎಂದು ಗುರುತಿಸಲಾಗಿದೆ. ಇನ್ನು ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತರ ಕೈವಾಡದ ಕುರಿತು ಪೊಲೀಸರು ಶಂಕಿಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.