
ಸೋಮನಾಥ್: ತಮ್ಮ ತವರು ಗುಜರಾತ್ ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ತ್ರಿವೇಣಿ ಸಂಗಮದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಗುಜರಾತಿ ಭಾಷೆಯಲ್ಲಿ ಭಾಷಣ ಆರಂಭಿಸಿದರು. ಈ ವೇಳೆ ಅಲ್ಲಿ ನೆರೆದಿದ್ದ ಕಾರ್ಯಕರ್ತರು ಚಪ್ಪಾಳೆ ತಟ್ಟುವ ಮೂಲಕ ತಮ್ಮ ಹರ್ಷ ವ್ಯಕ್ತಪಡಿಸಿದರು.
ಬೆಳಗ್ಗೆ ಡಿಯು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಜರಾತ್ ಸರ್ಕಾರದ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ವಿಶೇಷ ಹೆಲಿಕಾಪ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮನಾಥ್ ಗೆ ಕರೆದೊಯ್ಯಲಾಯಿತು. ಈ ವೇಳೆ ಸೋಮನಾಥ್ ನಲ್ಲಿರುವ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ವಿಗ್ರಹಕ್ಕೆ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ಪ್ರಧಾನಿ ಸೋಮನಾಥೇಶ್ವರನಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಪ್ರಧಾನಿ ಮೋದಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಇತರೆ ಗಣ್ಯರು ಸಾಥ್ ನೀಡಿದರು.
ಇನ್ನು ಸೋಮನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಹಿನ್ನಲೆಯಲ್ಲಿ ಇಡೀ ದೇಗುಲ ಮತ್ತು ದೇಗುಲದ ಸುತ್ತಮುತ್ತಲಿನ ಪ್ರದೇಶಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
Advertisement