ಭೋಪಾಲ್: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಶುಕ್ರವಾರ ಪ್ರಕರಣದ ತೀರ್ಪು ಪ್ರಕಟವಾಗುವ ಕೆಲವೇ ಗಂಟೆಗಳ ಮುನ್ನ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೋರೆನಾ ಜಿಲ್ಲಾ ಕಾರಗೃಹದಲ್ಲಿದ್ದ ದಿನೇಶ್ ಜಾತವ್(28) ಇಂದು ಬೆಳಗ್ಗೆ ಜೈಲಿನ ಶೌಚಾಲಯದಲ್ಲಿ ವೆಂಟಿಲೇಟರ್ ಫ್ಯಾನ್ ಗೆ ಟೋವೆಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಜಾತವ್ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದು, ಸ್ಥಳೀಯ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಬೇಕಾಗಿತ್ತು.
ವಿಚಾರಣಾಧೀನ ಕೈದಿ ಆತ್ಮಹತ್ಯೆ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಜೈಲು ವಾರ್ಡನ್ ಹಾಗೂ ಜೈಲಿನ ಇಬ್ಬರು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.