ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಿಂದ ಅಸಮಾಧಾನಗೊಂಡಿರುವ ಹಲವು ಹಿರಿಯ ಕಾಂಗ್ರೆಸ್ ನಾಯಕರು ಪಕ್ಷ ತೊರೆಯಲಿದ್ದಾರೆ ಎಂದು ಬಿಜೆಪಿ ಸಂಸದ ಅನುರಾಗ್ ಥಾಕೂರ್ ಅವರು ಶುಕ್ರವಾರ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿಯ 'ಕಾಂಗ್ರೆಸ್ ಮುಕ್ತ ಭಾರತ' ಘೋಷಣೆ ನಿಜವಾಗಲಿದೆ ಎಂದು ಅನುರಾಗ್ ಥಾಕೂರ್ ಅವರು ಹೇಳಿದ್ದಾರೆ.
ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಹಲವು ಹಿರಿಯ ಕಾಂಗ್ರೆಸ್ ನಾಯಕರಿಗೆ ಭಾವಿಸಿದ್ದು, ಡಿಸೆಂಬರ್ 18ರಂದು ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯ ನಂತರ ಅವರೆಲ್ಲರೂ ಪಕ್ಷ ತೊರೆಯಲಿದ್ದಾರೆ ಎಂದು ಥಾಕೂರ್ ತಿಳಿಸಿದ್ದಾರೆ.
ಇನ್ನು ಶೀಘ್ರದಲ್ಲೇ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಥಾಕೂರ್, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗುವುದರಿಂದ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದಿದ್ದಾರೆ.