ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಈ ಸಂಬಂಧ ದೆಹಲಿ, ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಷ್ಟ್ರ ರಾಜಧಾನಿಯಲ್ಲಿ ತುರ್ತು ಪರಿಸ್ಥಿತಿಯ ಸನ್ನಿವೇಶ ನಿರ್ಮಾಣವಾಗಿದ್ದು, ತುರ್ತು ಕ್ರಮ ತೆಗೆದುಕೊಳ್ಳುವಂತೆ ನಾಲ್ಕು ರಾಜ್ಯಗಳಿಗೆ ನೋಟಿಸ್ ನೀಡಿದೆ.
ರಸ್ತೆಯ ದೂಳು ಹಾಗೂ ದೆಹಲಿಯ ನೆರೆಯ ರಾಜ್ಯಗಳಾದ ಹರಿಯಾಣ ಮತ್ತು ಪಂಜಾಬ್ ನಲ್ಲಿ ರೈತರು ಏಕ ಕಾಲಕ್ಕೆ ಕೃಷಿ ತ್ಯಾಜ್ಯ ಸುಡುತ್ತಿರುವುದು ರಾಷ್ಟ್ರ ರಾಜಧಾನಿಯ ಮಾಲಿನ್ಯ ಪ್ರಮಾಣ ಹೆಚ್ಚಲ ಕಾರಣವಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮತ್ತು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಲಾಗಿತ್ತು.
ಅಲ್ಲದೆ ದೆಹಲಿಯಲ್ಲಿ ಸಮ-ಬೆಸ ನಿಯಮ ಮತ್ತೆ ಜಾರಿಗೊಳಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.