ನವದೆಹಲಿ: ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡುವ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ದೆಹಲಿಯಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯಾಗಿ ರಾಹುಲ್ ಗಾಂಧಿ ಅವರನ್ನು ಅಯ್ಕೆ ಮಾಡುವ ನಿರ್ಣಯಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ಒಕ್ಕೋರಲಿನ ನಿರ್ಣಯ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಗುಜರಾತ್ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿ ನೀಡುವ ಕುರಿತು ಚರ್ಚೆ ನಡೆಸಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಗಳಿಂದಾಗಿ ರಾಹುಲ್ ಗಾಂಧಿಗೆ ಗುಜರಾತ್ ಚುನಾವಣೆಗೂ ಮೊದಲೇ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಲು ನಿರ್ಧರಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಈ ನಿರ್ಧಾರಕ್ಕೆ ಹಾಲಿ ಅಧ್ಯಕ್ಷೆ ಹಾಗೂ ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯ ಹಾಗೂ ಬದಲಾದ ರಾಹುಲ್ ಗಾಂಧಿ ವರ್ಚಸ್ಸೇ ಕಾರಣ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿರುವಂತೆ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಸ್ತಾಪ ಮಾಡಲಾಗುತ್ತದೆ ಎಂದು ನಿನ್ನೆ ವರದಿಯಾಗಿತ್ತು.
ಅದರಂತೆ ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಾರಥಿಯಾಗಿದ್ದ ಸೋನಿಯಾಗಾಂಧಿ ಅವರು ನಾಳೆ ರಾಹುಲ್ ಗಾಂಧಿ ಅವರಿಗೆ ತಮ್ಮ ಜವಾಬ್ದಾರಿಯನ್ನು ನೀಡಲಿದ್ದಾರೆ.