ಕೋಲ್ಕತಾ: ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ತೃಣಮೂಲ ಕಾಂಗ್ರೆಸ್ ಸಂಸದ ಸುಲ್ತಾನ್ ಅಹಮ್ಮದ್ ಅವರು ಸೋಮವಾರ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
64 ವರ್ಷದ ಸುಲ್ತಾನ್ ಅಹಮ್ಮದ್ ಅವರಿಗೆ ಇಂದು ಬೆಳಗ್ಗೆ ತೀವ್ರ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಉಲುಬೇರಿಯಾ ಕ್ಷೇತ್ರದ ಸಂಸದರಾಗಿದ್ದ ಸುಲ್ತಾನ್ ಅಹಮ್ಮದ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಆಗಲಿದ್ದಾರೆ.
ಅಹಮ್ಮದ್ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ,
ಟಿಎಂಸಿ ಸಂಸದನ ಅಕಾಲಿಕ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.