ನವದೆಹಲಿ: ಗೋ ರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಹತ್ತಿಕ್ಕಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಜಿಲ್ಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕೆಂದು ಉಚ್ಛ ನ್ಯಾಯಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಕೃತ್ಯ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಾರ್ಯಪಡೆಯನ್ನು ರಚಿಸಲು ಪ್ರತಿ ರಾಜ್ಯಕ್ಕೆ ಏಳು ದಿನಗಳ ಸಮಯಾವಕಾಶವನ್ನು ನೀಡಲಾಗಿದೆ.
ಗೋ ರಕ್ಷಣೆ ಹೆಸರಿನಲ್ಲಿ ಕಾನೂನನ್ನು ತಮ್ಮ ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಹಿಂಸಾಕೃತ್ಯ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲು ಸಂವಿಧಾನದಡಿಯಲ್ಲಿ ತನಗೆ ಜವಾಬ್ದಾರಿಯಿದೆಯೇ ಎಂದು ಉತ್ತರ ನೀಡುವಂತೆ ಕೂಡ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.
ಕೇಂದ್ರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗ್ರತೆ ವಹಿಸಲು ಕಾನೂನುಗಳಿವೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕಾನೂನುಗಳಿವೆ ಎಂಬುದು ನಮಗೂ ಗೊತ್ತಿದೆ. ಆದರೆ ಸರ್ಕಾರ ಏನು ಕ್ರಮ ಕೈಗೊಂಡಿದೆ. ಸರ್ಕಾರ ಯೋಜಿತ ಕ್ರಮ ಕೈಗೊಂಡರೆ ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಕೃತ್ಯ ಬೆಳೆಯುವುದಿಲ್ಲ ಎಂದು ಹೇಳಿದರು.
ಗೋ ರಕ್ಷಣೆ ಹೆಸರಿನಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಸಲಾಗುತ್ತದೆ ಎಂದು ಕಾರ್ಯಕರ್ತ ತೆಹ್ಸೀನ್ ಎಸ್.ಪೂನಂವಲ್ಲಾ ಸಲ್ಲಿಸಿದ್ದ ಮನವಿಗೆ ಆರು ರಾಜ್ಯಗಳ ಪ್ರತಿಕ್ರಿಯೆಯನ್ನು ಕಳೆದ ಏಪ್ರಿಲ್ 7ರಂದು ಸುಪ್ರೀಂ ಕೋರ್ಟ್ ಕೋರಿತ್ತು.