ಪ್ರಧಾನಿ ಭಾಷಣ ವೀಕ್ಷಿಸಲು ಯುಜಿಸಿ ಸುತ್ತೋಲೆಗೆ ಪಶ್ಚಿಮ ಬಂಗಾಳದಲ್ಲಿ ಆಕ್ಷೇಪ!
ಸೆ.11 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ವೀಕ್ಷಿಸುವಂತೆ ಯುಜಿಸಿ ಎಲ್ಲಾ ಸರ್ಕಾರಿ ವಿಶ್ವವಿದ್ಯಾನಿಲಯಗಳಿಗೂ ಸುತ್ತೋಲೆ ಹೊರಡಿಸಿರುವುದಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಕೋಲ್ಕತ್ತಾ: ಸೆ.11 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ವೀಕ್ಷಿಸುವಂತೆ ಯುಜಿಸಿ ಎಲ್ಲಾ ಸರ್ಕಾರಿ ವಿಶ್ವವಿದ್ಯಾನಿಲಯಗಳಿಗೂ ಸುತ್ತೋಲೆ ಹೊರಡಿಸಿರುವುದಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಯುಜಿಸಿ ಸುತ್ತೋಲೆ ಪ್ರಕಾರ ಮೋದಿ ಭಾಷಣವನ್ನು ನೋಡುವುದಕ್ಕೆ ಸೂಚನೆ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟನೆ ನೀಡಿದೆ. ವಿದ್ಯಾರ್ಥಿಗಳಿಗೆ ಹಾಗೂ ಬೋಧಕ ವರ್ಗದ ಸಿಬ್ಬಂದಿಗಳಿಗೆ ಸೆ.11 ರ ಮೋದಿ ಅವರ ಭಾಷಣ ವೀಕ್ಷಿಸಲು ಅವಕಾಶ ನೀಡುವಂತೆ ಯುಜಿಸಿ ಸುತ್ತೋಲೆಯಲ್ಲಿ ತಿಳಿಸಿತ್ತು.
ಪಂಡಿತ್ ದೀನ ದಯಾಳ ಉಪಾಧ್ಯಾಯರ 125 ನೇ ಜನ್ಮ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ್ದರ ನೆನಪಿನ ಅಂಗವಾಗಿ ಸೆ.11 ರಂದು ಪ್ರಧಾನಿ ನರೇಂದ್ರ ಮೋದಿ ಯಂಗ್ ಇಂಡಿಯಾ, ನ್ಯೂ ಇಂಡಿಯಾ ಎಂಬ ಥೀಮ್ ನ ಅಡಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಇದು ಶಿಕ್ಷಣ ಕ್ಷೇತ್ರವನ್ನು ಕೇಸರೀಕರಣಗೊಳಿಸುವ ಯತ್ನವಾಗಿದೆ, ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅವರಷ್ಟೇ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.