ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೇಜರ್ ಹಾಗೂ ಓರ್ವ ಯೋಧ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಪುಲ್ವಾಮ ಜಿಲ್ಲೆಯ ದ್ರಬ್ಗಮ್ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿಗಳು ತಿಳಿದುಬಂದಿದ್ದವು. ಈ ಹಿನ್ನಲೆಯಲ್ಲಿ ಸಿಆರ್'ಪಿಎಫ್ ಹಾಗೂ ಸೇನಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದವು.
ಉಗ್ರರಿದ್ದ ಸ್ಥಳ ಸುತ್ತುವರೆದ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಲು ಮುಂದಾಗಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಮೇಜರ್ ಹಾಗೂ ಓರ್ವ ಯೋಧ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಅಡಗಿ ಕುಳಿತಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸಮೀರ್ ಟೈಗರ್ ಅಥವಾ ಮನನ್ ವಾನಿ ಇರಬಹುದು ಎಂದು ಶಂಕಿಸಲಾಗುತ್ತಿದೆ.
ಒಂದೆಡೆ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ಥಳೀಯ ಯುವಕರು ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪ್ರತಿಭಟಿಸಲು ಕಾಲ್ನಡಿಗೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರಸ್ತುತ ಎನ್ ಕೌಂಟರ್ ನಡೆಯುತ್ತಿರುವ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಸ್ಥಳದಲ್ಲಿ ಕಲ್ಲು ತೂರಾಟ ಕೂಡ ನಡೆಯುತ್ತಿವೆ ಎನ್ನಲಾಗುತ್ತಿದೆ. ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆನ್ನಲಾಗುತ್ತಿದೆ.