ನವದೆಹಲಿ: ಅಂಗವಿಕಲರು, ವೃದ್ದರು ಹಾಗೂ ವಿಧವೆಯರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ ನಿಯಮವನ್ನು ರದ್ದುಗೊಳಿಸಬೇಕು ಎಂದು ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ದೆಹಲಿ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಆಧಾರ್ ಇಲ್ಲದ್ದಕ್ಕಾಗಿ ತಡೆಹಿಡಿಯಲಾಗಿದ್ದ ಪಿಂಚಣಿಯನ್ನು ಸಮಾಜ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಇದೇ ವೇಳೆ ಪರಿಷ್ಕೃತ ಪಿಂಚಣಿಯನ್ನು ಏಪ್ರಿಲ್ 2018ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಸಂಪುಟ ಸಭೆ ನಿರ್ಧರಿಸಿದೆ.