ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರವಾಹ ಪೀಡಿತ ಕೇರಳಕ್ಕೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕೇರಳ ಪ್ರವಾಹ ಪರಿಸ್ಥಿತಿ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ, ಸಂತ್ರಸ್ಥರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ಕೇರಳ ಸರ್ಕಾರಕ್ಕೆ ತಕ್ಷಣ ಕೇಂದ್ರದಿಂದ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕೇರಳದಲ್ಲಿ ಕಳೆದ ಐದು ದಶಕಗಳಲ್ಲೇ ಅತಿ ಹೆಚ್ಚು ಮಳೆಯಾಗಿದ್ದು, ನೈಸರ್ಗಿಕ ವಿಕೋಪದಿಂದಾಗಿ ಭಾರಿ ಆರ್ಥಿಕ ನಷ್ಟ ಹಾಗೂ ಜೀವಹಾನಿಯಾಗಿದೆ. ಪ್ರವಾಹಕ್ಕೆ ತುತ್ತಾದವರ ಪೈಕಿ ಹೆಚ್ಚಿನವರು ಮೀನುಗಾರರಾಗಿದ್ದಾರೆ ಎಂದು ರಾಹುಲ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಿರಂತರ ಮಳೆಯಿಂದ ತತ್ತರಿಸಿರುವ ದೇವರನಾಡು ಕೇರಳದಲ್ಲಿ ಇದುವರೆಗೆ 30 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.