ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರಾದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಅವಂತಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಉಗ್ರರು ದಾಳಿ ನಡೆಸಿದ ಹಿನ್ನಲೆಯಲ್ಲಿ ಎನ್'ಕೌಂಟರ್ ನಡೆಸಲು ಆರಂಭಿಸಿದ ಭದ್ರತಾ ಪಡೆಗಳು, ಸ್ಥಳವನ್ನು ಸುತ್ತುವರೆದು ಉಗ್ರರಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಇದರಂತೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಈ ನಡುವೆ ಬಂಡಿಪೋರಾದಲ್ಲಿಯೂ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.