ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಗಡಿಯಲ್ಲಿ ಶೇ.500ರಷ್ಟು ಕದನ ವಿರಾಮ ಉಲ್ಲಂಘನೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಪ್ರಮೋದ್ ತಿವಾರಿಯವರು, ಪ್ರಧಾನಮಂತ್ರಿ ಮೋದಿ ಸರ್ಕಾರ ದೇಶದ ಭದ್ರತೆಯನ್ನು ದುರ್ಬಲಗೊಳಿಸುತ್ತಿದ್ದು, ಯುಪಿಎ ಸರ್ಕಾರ ಅವಧಿಗೆ ಹೋಲಿಸಿದರೆ ಗಡಿಯಲ್ಲಿ ಶೇ.500ರಷ್ಟು ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಕಳೆದ 44 ತಿಂಗಳುಗಳಲ್ಲಿ ಪಾಕಿಸ್ತಾನ ಹಾಗೂ ಚೀನಾ ಗಡಿಗಳಲ್ಲಿ 2,474 ಬಾರಿ ಕದನ ವಿರಾಮ ಉಲ್ಲಂಘನೆಗಳಾಗಿವೆ. ಗಡಿ ನಿಯಂತ್ರಣ ರೇಖೆ ಬಳಿ 160 ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರದ ಅಡಿಯಲ್ಲಿ ರಾಷ್ಟ್ರೀಯ ಭದ್ರತೆ ಕೇವಲ ಪ್ರಧಾನಮಂತ್ರಿಗಳ ಭಾಷಣಕ್ಕಷ್ಟೇ ಸೀಮಿತಗೊಂಡಿದೆ. ನಾವು ರಾಜಕೀಯವಾಗಿ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ. ಆದರೆ, ರಾಷ್ಟ್ರದ ಭದ್ರತೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿರುವುದು ನಮಗೆ ತೀವ್ರ ಬೇಸರವನ್ನು ತಂದಿದೆ ಎಂದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಕ್ಯಾಪ್ಟನ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.