ಮಕ್ಕಳ ಹಕ್ಕುಗಳ ಆಯೋಗಗಳಲ್ಲಿ ಖಾಲಿ ಇರುವ ಹುದ್ದೆಗಳ ಶೀಘ್ರ ಭರ್ತಿಗೆ ಸುಪ್ರೀಂ ಆದೇಶ

ಬಾಲಾಪರಾಧ ನ್ಯಾಯ ಕಾಯ್ದೆಯ ಪರಿಣಾಮಕಾರಿ ಜಾರಿಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಬಾಲಾಪರಾಧ ನ್ಯಾಯ ಕಾಯ್ದೆಯ ಪರಿಣಾಮಕಾರಿ ಜಾರಿಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಮದನ್ ಬಿ ಲೊಕೂರ್ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ, ಬಾಲಾಪರಾಧಿ ನ್ಯಾಯ ಮಂಡಳಿ ಮತ್ತು  ಮಕ್ಕಳ ಅಭಿವೃದ್ಧಿ ಸಮಿತಿಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನಿಯಮಾನುಸಾರ ತ್ವರಿತಗತಿಯಲ್ಲಿ ಭರ್ತಿ ಮಾಡಬೇಕೆಂದು ಹೇಳಿದೆ.
ಮಕ್ಕಳ ಹಕ್ಕುಗಳ ಆಯೋಗಗಳಲ್ಲಿ ಸಿಬ್ಬಂದಿ ಕೊರತೆಯಿಂದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಹೀಗಾಗಿ ವಿಳಂಬತೆಯನ್ನು ತಡೆಯಬೇಕೆಂದು ನ್ಯಾಯಪೀಠ ಹೇಳಿದೆ.
ಬಾಲಾಪರಾಧ(ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ 2015 ಪರಿಣಾಮಕಾರಿಯಾಗಿ ಜಾರಿಗೆ ಬರಲು ನ್ಯಾಯಾಲಯದ ಕಲಾಪಗಳನ್ನು ಎಲ್ಲಾ ಹೈಕೋರ್ಟ್ ಗಳು ದಾಖಲು ಮಾಡಿಕೊಳ್ಳಬೇಕು ಎಂದು ಎಲ್ಲಾ ಹೈಕೋರ್ಟ್ ಗಳ ಮುಖ್ಯ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಮನವಿ ಮಾಡಿದೆ.
ಮಕ್ಕಳ ಸ್ನೇಹಿ ನ್ಯಾಯಾಲಯಗಳನ್ನು ಪ್ರತಿ ಜಿಲ್ಲೆಗಳಲ್ಲಿ ಸ್ಥಾಪಿಸುವಂತೆ ಕೂಡ ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಆಯೋಗಗಳು ಕಾಲಕಾಲಕ್ಕೆ ಸರಿಯಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹಾಗೂ ರಾಜ್ಯ ಸರ್ಕಾರಗಳು ನೋಡಿಕೊಳ್ಳಬೇಕೆಂದು ನ್ಯಾಯಾಲಯ ಹೇಳಿದೆ.
ಬಾಲಾಪರಾಧ ನ್ಯಾಯ ಕಾಯ್ದೆ ಮತ್ತು ಅದರ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com