ನವದೆಹಲಿ: ರಾಜ್ಯದ ಕಾವೇರಿ ನದಿ ಪಾತ್ರದಲ್ಲಿರುವ ಡ್ಯಾಂಗಳಲ್ಲೇ ನೀರು ಇಲ್ಲ. ಈಗಿರುವಾಗ ತಮಿಳುನಾಡಿಗೆ ಸದ್ಯ ಕಾವೇರಿ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಡನೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾವೇರಿ ನದಿ ಪಾತ್ರದಲ್ಲಿರುವ ಡ್ಯಾಂಗಳಲ್ಲೇ ನೀರು ಇಲ್ಲ. ಈಗಿರುವಾಗ ತಮಿಳುನಾಡಿನ ಬೇಡಿಕೆಯನ್ನು ಪೂರೈಸುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಪಟ್ಟಂತೆ ಮುಂದಿನ ತಿಂಗಳು ಅಂತಿಮ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಅವರು 15 ಟಿಎಂಸಿ ಕಾವೇರಿ ನೀರು ಬಿಡುವಂತೆ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹಾಗೂ ಇತರೆ ಪ್ರಮುಖರೊಡನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಿದ್ದಾರೆ.