ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಶನಿವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿರುವುದಾಗಿ ಸೇನೆ ತಿಳಿಸಿದೆ.
ಸುಂದರಬನಿ ಸೆಕ್ಟರ್ ನ ಗಡಿ ನಿಯಂತ್ರ ರೇಖೆ ಬಳಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾರಾಷ್ಟ್ರ ಮೂಲದ ಲ್ಯಾನ್ಸ್ ನಾಯಕ್ ಯೋಗೇಶ್ ಮುರಳಿಧರ್ ಭದನೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ.
ನಿನ್ನೆ ಪಾಕಿಸ್ತಾನ ಸೇನೆ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಮುಖ್ಯ ಪೇದೆ ಹುತಾತ್ಮರಾಗಿದ್ದರು.