ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಶೋಪಿಯಾನ ಜಿಲ್ಲೆಯ ಗನೊವ್ ಪೊರಾ ಗ್ರಾಮದಲ್ಲಿ ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.