

ದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜ.30ರಿಂದ ಎರಡು ದಿನ ಈಶಾನ್ಯ ರಾಜ್ಯಗಳ ಪ್ರವಾಸ ಕೈಗೊಳ್ಳಲಿದ್ದು, ಮೇಘಾಲಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಮೇಘಾಲಯದ ರಾಜಧಾನಿ ಶಿಲ್ಲಾಂಗ್ ನಲ್ಲಿ ಸ್ಥಳೀಯರು ಯುವಕರು ಸಂಗೀತ ಕಾರ್ಯಕ್ರಮ ಆಯೋಜಿಸಿದ್ದು, ರಾಹುಲ್ ಗಾಂಧಿ ಪಾಲ್ಗೊಳ್ಳುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶಿಲ್ಲಾಂಗ್ ಸಂಸದ ವಿನ್ಸೆಂಟ್ ಪಾಲ್ ತಿಳಿಸಿದ್ದಾರೆ.
ಮೇಘಾಲಯದ ವಿವಿಧ ಜಿಲ್ಲೆಗಳ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿರುವ ರಾಹುಲ್ ಗಾಂಧಿ, ಲೋಪದೋಷಗಳ ಬಗ್ಗ ಅರಿವು ಮೂಡಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಸೂಚನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರವಾಸದ ವೇಳೆ ಯಾವುದೇ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡುವುದಿಲ್ಲ,ಇದಕ್ಕಾಗಿ ಫೆಬ್ರವರಿ ತಿಂಗಳಲ್ಲಿ ಮತ್ತೆ ಪ್ರವಾಸ ಕೈಗೊಳ್ಳಲಿದ್ದಾರೆ. ಡಾಕ್ಟರ್, ವಕೀಲರು, ಉಪಾಧ್ಯಾಯರು ಸೇರಿದಂತೆ ಮತ್ತಿತರ ಸಾಮಾಜಿಕ ಗುಂಪುಗಳನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ.
ಮೇಘಾಲಯದ 60 ವಿಧಾನಸಭಾ ಕ್ಷೇತ್ರಗಳಿಗೆ ಫೆ. 27 ಮತ್ತು ಮಾ. 3 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮುಕುಲ್ ಸಂಗ್ಮಾ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಬಿಜೆಪಿಗೆ ಪೈಪೋಟಿ ನೀಡಲು ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಶತ ಪ್ರಯತ್ನ ನಡೆಸುತ್ತಿದ್ದಾರೆ.
ಚುನಾವಣೆ ನಿಗದಿಯಾಗುತ್ತಿದ್ದಂತೆ ಕಾಂಗ್ರೆಸಿನ ಐದು ಮಂದಿ ಶಾಸಕರು ರಾಜೀನಾಮೆ ನೀಡಿ ಎನ್ ಪಿಪಿಗೆ ಸೇರ್ಪಡೆಯಾಗಿದ್ದಾರೆ.ಇನ್ನಿಬ್ಬರು ಬಿಜೆಪಿ ಮತ್ತು ಪಿಡಿಎಫ್ ಗೆ ಸೇರಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯುಂಟುಮಾಡಿದೆ.