ಕಾವೇರಿ ಆಸ್ಪತ್ರೆ
ದೇಶ
ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆರೋಗ್ಯ ಮತ್ತಷ್ಟು ಗಂಭೀರ
ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ...
ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಕೊಯಂಬತ್ತೂರು ಪ್ರವಾಸ ಮೊಟಕುಗೊಳಿಸಿ ಚೆನ್ನೈಗೆ ವಾಪಸ್ ಆಗಿದ್ದಾರೆ.
ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಇಂದು ಸಂಜೆ ಮತ್ತಷ್ಟು ಗಂಭೀರವಾಗಿದ್ದು, ಆತಂಕಗೊಂಡ ಡಿಎಂಕೆ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.
ಕರುಣಾನಿಧಿ ಕುಟಂಬಸ್ಥರು ಹಾಗೂ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸಹ ಆಸ್ಪತ್ರೆಗೆ ಆಗಮಿಸಿದ್ದು, ಆಸ್ಪತ್ರೆ ಸುತ್ತ ಭಾರಿ ಭದ್ರತೆ ಏರ್ಪಡಿಸಲಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಕಾವೇರಿ ಆಸ್ಪತ್ರೆ ಭಾನುವಾರ ರಾತ್ರಿ ಪ್ರಕಟಣೆ ನೀಡಿದ್ದು, ಕರುಣಾನಿಧಿ ಅವರ ಪರಿಸ್ಥಿತಿ ಗಂಭೀರವಾಗಿದ್ದರೂ ಸುಧಾರಿಸುತ್ತಿದೆ. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ತೀವ್ರ ನಿಗಾ ಇರಿಸಲಾಗಿದೆ ಎಂದು ತಿಳಿಸಲಾಗಿದೆ.
ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕರೆತರಲಾಗಿದ್ದ ಕರುಣಾನಿಧಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ಶುಕ್ರವಾರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ಕರೆತಂದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವರು ಕರುಣಾನಿಧಿ ಶೀಘ್ರ ಚೇತರಿಕೆ ಹಾರೈಸಿ ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ