

ಮಹಾರಾಷ್ಟ್ರ: ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಅರ್ನಿ ತಾಲ್ಲೂಕು ಬಳಿ ಇಂದು ನಸುಕಿನ ಜಾವ ಸಂಭವಿಸಿದೆ.
ಕುಟುಂಬದವರೆಲ್ಲರೂ ಮೂರು ವಿವಿಧ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರ್ ಮತ್ತು ಟ್ರಕ್ ವೇಗವಾಗಿ ಬಂದ ಪರಿಣಾಮ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಹತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಹಾಗೂ ಪುರುಷರು ಎನ್ನಲಾಗಿದೆ.
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸಮೀಪದ ಯುವತ್ಮಾಲ್ ಗ್ರಾಮೀಣ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನಿಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನೆಯ ಹೆಚ್ಚಿನ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.
ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಬಸ್ ಮತ್ತು ದ್ವಿಚಕ್ರವಾಹನ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದ ಘಟನೆ ನಡೆದಿತ್ತು.