ಚೆನ್ನೈ: ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿರುವ ತಮಿಳು ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ರಜನಿಕಾಂತ್ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಅದೊಂದೆ ಏಕೈಕ ಪರಿಹಾರ ಎಂದು ಗುರುವಾರ ಹೇಳಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಮಗೆ ನಿರ್ವಹಣಾ ಮಂಡಳಿ ರಚನೆಯೇ ಏಕೈಕ ಪರಿಹಾರವಾಗಿದ್ದು, ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಕಳೆದ ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಆರು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.
ಎರಡು ದಿನಗಳ ಹಿಂದಷ್ಟೇ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಪ್ರಕ್ರಿಯೆ ಜಾರಿಯಲ್ಲಿದ್ದು, ಎಷ್ಟು ದಿನಗಳಲ್ಲಿ ಮಂಡಳಿ ಅಸ್ತಿತ್ವಕ್ಕೆ ಬರುತ್ತದೆ ಎನ್ನುವುದನ್ನು ಹೇಳಲಾಗದು ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಹೇಳಿದ್ದರು.