ಚೆನ್ನೈ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ವಿಫಲವಾದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಚೆನ್ನೈನ ಮರಿನಾ ಬೀಚ್ ನಲ್ಲಿ ನೂರಾರು ಮಂದಿ ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಮಿಂಚಿನ ಪ್ರತಿಭಟನೆ ನಡೆಸಿದರು.
ಇಂದು ಬೆಳಗ್ಗೆಯಷ್ಟೇ ಮರಿನಾ ಬೀಚ್ ನಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಸಂದೇಶ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಬೀಚ್ ನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಮರಿನಾ ಬೀಚ್ ನ ವಿವಿಧ ಸ್ಥಳಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ಈ ಮಧ್ಯ, ಬೀಚ್ ಗೆ ಬರುವ ಪ್ರತಿಯೊಬ್ಬರು ಬಿತ್ತಿಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸದ ಪೊಲೀಸರು ಪ್ರತಿಭಟನಾಕಾರರನ್ನು ಬೀಚ್ ನಿಂದ ತೆರವುಗೊಳಿಸಿದ್ದಾರೆ.