ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಬುಧವಾರ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಇಂದು ಸಂಜೆ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಕುಮಾರಸ್ವಾಮಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ರಚನೆಯ ರೂಪುರೇಷೆಗಳ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇದಕ್ಕು ಮುನ್ನ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರನ್ನುಭೇಟಿ ಮಾಡಿದ್ದ ನಿಯೋಜಿತ ಸಿಎಂ, ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು.
ಕುಮಾರಸ್ವಾಮಿ ಅವರು ನಾಳೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ವಿಧಾನಸೌಧ ಮುಂಭಾಗ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಮಾಯಾವತಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಗುಲಾಂ ನಬಿ ಅಜಾದ್ ಸೇರಿದಂತೆ ಹಲವು ನಾಯಕರು ಆಗಮಿಸುವ ಸಾಧ್ಯತೆ ಇದೆ.