ನವದೆಹಲಿ: ರಾಜಸ್ಥಾನ ಮತ್ತು ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಘೋಷಿಸಿದ್ದು, ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ಭಾರಿ ಹಿನ್ನೆಡೆಯಾಗಿದೆ.
ರಾಜಸ್ಥಾನ ಮತ್ತು ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಕಿಯಾಗಿ ಇಲ್ಲವೆ ಅಲ್ಲಿನ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದೆ. ಆದರೆ ಕಾಂಗ್ರೆಸ್ ಜೊತೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ, ದೇಶದ ಅತ್ಯಂತ ಹಳೆಯ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಬದಲು, ಬಿಎಸ್ಪಿಯನ್ನು ಮುಗಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ಮತ್ತು ಛತ್ತೀಸ್ ಗಢದಲ್ಲಿ ನಾವು ಪ್ರಾದೇಶಿಕ ಪಕ್ಷಳೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಈಗ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲೂ ಅದೇ ರೀತಿ ಮಾಡಲಾಗುವುದು ಎಂದು ಮಾಯಾವತಿ ಹೇಳಿದ್ದಾರೆ.