ಅಲೋಕ್ ವರ್ಮಾ ಪರವಾಗಿ ಹಿರಿಯ ವಕೀಲ ಫಾಲಿ ನಾರಿಮನ್ ಹಾಗೂ ಸಂಜಯ್ ಹೆಗ್ಡೆಯವರು ವಾದ ಮಂಡಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ವಾದ ಮಂಡಿಸಿದರು.
ವಿಚಾರಣೆ ವೇಳೆ ವಾದ ಮಂಡಿಸಿದ ಸಿವಿಸಿ ಪರ ವಕೀಲರು ತನಿಖೆಗೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಈ ವಿಚಾರದಲ್ಲಿ ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ದೇಶದ ಹಿತದೃಷ್ಟಿಯಿಂದ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅಲೋಕ್ ವರ್ಮಾ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತು.
ಅಲ್ಲದೆ, ಸಿಬಿಐ ಹಂಗಾಮಿ ನಿರ್ದೇಶಕ ನಾಗೇಶ್ವರ್ ರಾವ್ ಅವರು ಯಾವುದೇ ನಿರ್ಧಾರಗಳನ್ನು ಕೈಗೊಳ್ಳದಂತೆ ತಿಳಿಸಿದ ನ್ಯಾಯಾಲಯ, ಕೇವಲ ದೈನಂದಿನ ಕಾರ್ಯ ನೋಡಿಕೊಳ್ಳಬಹುದು ಎಂದು ಹೇಳಿದೆ.