ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೆಲ್ಲರೂ ಪಾಲ್ಗೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ಇಂದು ದೇಶದ ಜನ ಬೀದಿಗಿಳಿಯುವಂತಾಗಿದೆ. ತೈಲೋತ್ಪನ್ನಗಳ ದರ ಏರಿಕೆಯಿಂದಾಗಿ ಬೇಸತ್ತ ಜನ ಇಂದು ತಾವೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ತಮ್ಮ ಮೌನ ಮುಂದುವರೆಸಿದ್ದಾರೆ. ದರ ಏರಿಕೆಯಿಂದಾಗಿ ಇಂದು ಜನ ತತ್ತರಿಸಿ ಹೋಗಿದ್ದರೂ ಪ್ರಧಾನಿ ಮೋದಿ ಮಾತ್ರ ಈ ಬಗ್ಗೆ ಒಂದೇ ಒಂದು ಶಬ್ಧ ಮಾತನಾಡುತ್ತಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶದಲ್ಲಿ ಕೋಮು ಗಲಭೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಮಹಿಳೆಯರ ಮೇಲಿನ ಹಿಂಸಾಚಾರ ಹೆಚ್ಚಾಗಿದ್ದರೂ ಪ್ರಧಾನಿ ಮೋದಿ ಮಾತ್ರ ಇನ್ನೂ ತಮ್ಮ ಮೌನ ಮುರಿದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.