ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಬಾರಾಮುಲ್ಲಾದ ತುಜ್ಝಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಕಾರ್ಯಾಚರಣೆ ಎನ್'ಕೌಂಟರ್ ಆಗಿ ಬದಲಾಗಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆದಿದೆ. ಇದರಂತೆ ಉಗ್ರರ ದಾಳಿಗೆ ದಿಟ್ಟ ಇತ್ತರ ನೀಡಿರುವ ಸೇನಾಪಡೆ ಇಬ್ಬರು ಉಗ್ರರನ್ನು ಸದೆಬಡಿದಿದೆ.
ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.