ಕೇರಳ ಪ್ರವಾಹ: ಮೃತರ ಸಂಖ್ಯೆ 88ಕ್ಕೆ ಏರಿಕೆ, 40 ಮಂದಿ ಕಣ್ಮರೆ
ತಿರುವನಂತಪುರ: ಕೇರಳ ರಾಜ್ಯದ 14 ಜಿಲ್ಲೆಗಳಲ್ಲಿ ಮಹಾಮಳೆಯ ರುದ್ರನರ್ತನದಿಂದಾಗಿ 88 ಮಂದಿ ಮೃತಪಟ್ಟಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗ್ಗೆಯವರೆಗೂ ದೊರೆತ ಅಧಿಕೃತ ಅಂಕಿಅಂಶಗಳ ಪ್ರಕಾರ 34 ಮಂದಿ ಪ್ರಕೃತಿ ವಿಕೋಪದಿಂದ ತೀವ್ರವಾಗಿ ಗಾಯಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದು, 88 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮಲ್ಲಾಪುರಂ ಜಿಲ್ಲೆಯಲ್ಲಿಯೇ ಅತಿ ಹೆಚ್ಚು 29 ಮಂದಿ ಮಂದಿ ಸಾವನ್ನಪ್ಪಿದ್ದಾರೆ.
ಪರಿಹಾರ ಕಾರ್ಯಾಚರಣೆ ಮುಂದುವರಿದಿದ್ದು, 1, 332 ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪ್ರವಾಹ ಪೀಡಿತ ವೈನಾಡು ಹಾಗೂ ಮಲ್ಲಾಪುರಂ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮೋಡ ಮುಸುಕಿದ ವಾತವಾರಣವಿರಲಿದ್ದು, ಚದುರಿದಂತೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.