

ರಾಂಚಿ: ಜಾರ್ಖಂಡ್ ವಿಧಾನಸಭೆಗೆ ನಡೆದ ಐದು ಹಂತಗಳ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿವೆ.
ಜಾರ್ಖಂಡ್ ನ 81 ಕ್ಷೇತ್ರಗಳ ಪೈಕಿ ಕಾಂಗ್ರೆಸ್, ಜೆಎಂಎ ಮೈತ್ರಿಕೂಟ 45 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ ಬಿಜೆಪಿ ಮೈತ್ರಿಕೂಟ 26 ಸ್ಥಾನಗಳನ್ನು ಪಡೆಯುವ ಮೂಲಕ ತೀವ್ರ ಮುಖಭಂಗಕ್ಕೆ ಈಡಾಗಿದೆ.
ಉಳಿದಂತೆ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಎಜೆಎಸ್ ಯು ಪಕ್ಷ 3, ಜೆವಿಎಂ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇತರರು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
81 ಸದಸ್ಯ ಬಲದ ಜಾರ್ಖಂಡ್ ನಲ್ಲಿ ಸರ್ಕಾರ ರಚನೆಗೆ 41 ಸದಸ್ಯ ಬಲದ ಅಗತ್ಯವಿದೆ. ಹೀಗಾಗಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಅವರು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಭರ್ಜರಿ ಸಿದ್ಥತೆ ನಡೆಸಿದ್ದಾರೆ.
2005 ಹಾಗೂ 2009 ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ನೀಡಿದ್ದ ಜಾರ್ಖಂಡ್ ಮತದಾರ 2014ರಲ್ಲಿ ಮೋದಿ ಅಲೆಗೆ ಅಸ್ತು ಎಂದಿದ್ದ. ಈ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟ ಜೈ ಹೇಳಿದ್ದಾರೆ.
Advertisement